ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರ ಎಂದು ಗುರುಗಳನ್ನು ದೇವರ ಸ್ಥಾನದಲ್ಲಿ ಪೂಜಿಸುವ ಸಂಸ್ಕೃತಿ ನಮ್ಮದು. ಆದರೆ ಇಂತಹ ಪವಿತ್ರ ವೃತ್ತಿಗೆ ಮಸಿ ಬಳಿಯುವ ಕೆಲಸವೊಂದನ್ನು ಕೆಲ ಶಿಕ್ಷಕರು ಮಾಡುತ್ತಿದ್ದಾರೆ. ಇಡೀ ಗುರುಕುಲ ವ್ಯವಸ್ಥೆಗೆ ಕಳಂಕ ತರುವಂತಹ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಗುರುಗಳೆ ಮಾಡಬಾರದ ಕೆಲಸ ಮಾಡಿ ಇದೀಗ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಕೆಂಭಾವಿ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯ 9 ಮತ್ತು 10ನೇ ತರಗತಿಯ 93 ವಿದ್ಯಾರ್ಥಿನಿಯರು ಶಿಕ್ಷಕರೊಂದಿಗೆ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದರು. ಮೂರು ದಿನಗಳ ಕಾಲ ಕರ್ನಾಟಕದ ವಿವಿಧ ಪ್ರವಾಸಿ ತಾಣಗಳನ್ನು ವೀಕ್ಷಿಸಿ ವಾಪಸ್ಸಾಗುವ ವೇಳೆ ಈ ಅಸಹ್ಯ ಘಟನೆ ನಡೆದಿದೆ ಎನ್ನಲಾಗಿದೆ.
ಪ್ರವಾಸದ ಸಮಯದಲ್ಲಿ ಶಿಕ್ಷಕರು ವಿದ್ಯಾರ್ಥಿನಿಯರಿಗೆ ಮುಜುಗರ ಉಂಟು ಮಾಡುವ ರೀತಿಯಲ್ಲಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿದ್ದ ಸ್ವೀಮಿಂಗ್ ಪೂಲ್‌ನಲ್ಲೇ ಶಿಕ್ಷಕರು ಅರೆಬೆತ್ತಲೆಯಾಗಿ ಸ್ನಾನ ಮಾಡಿದ್ದು ಮಾತ್ರವಲ್ಲದೆ, ಅದನ್ನು ಫೋಟೋ ಹಾಗೂ ವಿಡಿಯೋ ರೂಪದಲ್ಲಿ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.
ಇಷ್ಟಕ್ಕೆ ನಿಲ್ಲದೇ, ಆ ದೃಶ್ಯಗಳನ್ನು ತಮ್ಮ ಸಾಮಾಜಿಕ ಜಾಲತಾಣದ ಸ್ಟೇಟಸ್‌ಗೆ ಹಾಕಿಕೊಂಡಿರುವುದು ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆ ಬಹಿರಂಗವಾಗುತ್ತಿದ್ದಂತೆ ಪೋಷಕರು ಶಿಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಶಿಕ್ಷಕರ ಅಸಭ್ಯ ವರ್ತನೆಯ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಕೂಡಲೇ ಡಿಡಿಪಿಐ ಸಿ.ಎಸ್. ಮುಧೋಳ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲೆಗೆ ಭೇಟಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.
ಕ್ರಮ ಕೈಗೊಳ್ಳದೇ ಹೋದರೆ ನಾವೇ ಪೊಲೀಸ್ ಪ್ರಕರಣ ದಾಖಲಿಸುತ್ತೇವೆ ಎಂದು ಗ್ರಾಮಸ್ಥರು ಹಾಗೂ ಪೋಷಕರು ಎಚ್ಚರಿಕೆ ನೀಡಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗುವ ಸಾಧ್ಯತೆ ಕಂಡು ಕ್ಷೇತ್ರ ಶಿಕ್ಷಣಾಧಿಕಾರಿ ಪೊಲೀಸ್ ಭದ್ರತೆಯೊಂದಿಗೆ ಸ್ಥಳಕ್ಕೆ ತೆರಳಿದ್ದರು.
ಒಟ್ಟಾರೆ, ಇಂತಹ ಅನಿಷ್ಟ ಶಿಕ್ಷಕರು ವಿದ್ಯಾರ್ಥಿಗಳಿಗೆ ಪಾಠ ಹೇಳುವವರೆಗೆ ಈ ರೀತಿಯ ಘಟನೆಗಳು ಮುಂದುವರಿಯುತ್ತವೆ ಎಂಬ ಆತಂಕ ಪೋಷಕರಲ್ಲಿ ಮನೆ ಮಾಡಿದೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಕ್ರಮ ಜರುಗಿಸಿ, ಇಂತಹವರಿಗೆ ತಕ್ಕ ಶಿಕ್ಷೆ ನೀಡಬೇಕು ಎನ್ನುವುದು ಪೋಷಕರು ಹಾಗೂ ಸಾರ್ವಜನಿಕರ ಆಗ್ರಹವಾಗಿದೆ.






