ಬಸವಕಲ್ಯಾಣ: ತಾಲ್ಲೂಕಿನ ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ಆವರಣದಲ್ಲಿ ಕುಡುಕರ ಹಾವಳಿ ಹೆಚ್ಚುತ್ತಿದ್ದು, ಇದಕ್ಕೆ ತಕ್ಷಣ ಕಡಿವಾಣ ಹಾಕಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದರು.
ಸೋಮವಾರ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ನೇತೃತ್ವದಲ್ಲಿ ನಡೆದ ಮಕ್ಕಳೊಂದಿಗೆ ಸಂವಾದ ಹಾಗೂ ಅಹವಾಲು ಸ್ವೀಕಾರ ಸಭೆಯಲ್ಲಿ ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳನ್ನು ತೆರೆದಿಟ್ಟರು.
ಸಭೆಯಲ್ಲಿ ಬೇಲೂರು ಗ್ರಾಮದ ವಿದ್ಯಾರ್ಥಿನಿಯೊಬ್ಬಳು ಶಾಲಾ ಆವರಣದಲ್ಲಿ ನಡೆಯುತ್ತಿರುವ ಕುಡುಕರ ಕಾಟದ ಬಗ್ಗೆ ವಿವರಿಸುತ್ತಾ ಭಾವುಕಳಾಗಿ ಕಣ್ಣೀರಿಟ್ಟಳು. ಇದೇ ಶಾಲೆಯಲ್ಲಿ ವಿಜ್ಞಾನ ವಿಷಯವನ್ನು ಸರಿಯಾಗಿ ಬೋಧಿಸುವುದಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ಶಿಕ್ಷಕರು ವಿದ್ಯಾರ್ಥಿಗಳನ್ನು ಹೆದರಿಸುತ್ತಾರೆ ಎಂದು ಇಬ್ಬರು ವಿದ್ಯಾರ್ಥಿಗಳು ದೂರಿದರು.
ಸಸ್ತಾಪುರ ಸರ್ಕಾರಿ ಶಾಲೆಯ ಆವರಣದಲ್ಲಿ ಕುಡುಕರು ಸಾರಾಯಿ ಕುಡಿದು ಬಾಟಲಿಗಳನ್ನು ಒಡೆದು ಎಲ್ಲೆಂದರಲ್ಲಿ ಎಸೆಯುತ್ತಾರೆ. ಇದರಿಂದ ಗಾಜು ತುಂಡುಗಳಿಂದ ವಿದ್ಯಾರ್ಥಿಗಳಿಗೆ ಕಾಲಿಗೆ ಗಾಯಗಳಾಗುತ್ತಿವೆ. ಈ ಬಗ್ಗೆ ಹಲವು ಬಾರಿ ಸಂಬಂಧಿತ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ವಿದ್ಯಾರ್ಥಿಗಳು ಹೇಳಿದರು.
ಪ್ರತಾಪುರ ತಾಂಡಾ ಹಾಗೂ ಮೈಸಲಗಾ ಶಾಲೆಗಳ ಎದುರು ಕೆಲ ಯುವಕರು ದ್ವಿಚಕ್ರ ವಾಹನಗಳಲ್ಲಿ ಬಂದು ವಿದ್ಯಾರ್ಥಿಗಳಿಗೆ ಕಾಟ ನೀಡುತ್ತಿದ್ದಾರೆ ಎಂದೂ ಅಹವಾಲು ಸಲ್ಲಿಸಲಾಯಿತು. ಅಲ್ಲದೆ, ನಗರದ ಕೆಲವು ಶಾಲೆಗಳ ಎದುರು ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ಮಕ್ಕಳಿಗೆ ಸಂಚಾರದಲ್ಲಿ ತೊಂದರೆಯಾಗುತ್ತಿದೆ ಎಂದು ತಿಳಿಸಿದರು.
ಖಾನಾಪುರ, ಸಸ್ತಾಪುರ, ಪ್ರತಾಪುರ, ಪ್ರತಾಪುರ ತಾಂಡಾ, ಉಮಾಪುರ, ಜಾನಾಪುರ, ನೀಲಕಂಠವಾಡಿ ಸೇರಿದಂತೆ ಹಲವು ಗ್ರಾಮಗಳಿಗೆ ನಿಯಮಿತ ಬಸ್ ಸಂಚಾರ ಇಲ್ಲದ ಕಾರಣ ವಿದ್ಯಾರ್ಥಿಗಳು ಶಾಲೆ–ಕಾಲೇಜುಗಳಿಗೆ ಹೋಗಲು ತೀವ್ರ ಸಮಸ್ಯೆ ಅನುಭವಿಸುತ್ತಿದ್ದಾರೆ. ಕೆಲವರು ನಾಲ್ಕೈದು ಗಂಟೆಗಳವರೆಗೆ ಬಸ್‌ಗಾಗಿ ಕಾಯಬೇಕಾದ ಪರಿಸ್ಥಿತಿ ಎದುರಿಸುತ್ತಿದೆ. ಇದರಿಂದ ಓದಿನ ಮೇಲೂ ದುಷ್ಪರಿಣಾಮ ಬೀರುತ್ತಿದೆ ಎಂದು ಅಳಲು ತೋಡಿಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, “ವಿದ್ಯಾರ್ಥಿಗಳು ಮುಂದಿಟ್ಟ ಎಲ್ಲಾ ಸಮಸ್ಯೆಗಳನ್ನು ಒಂದು ವಾರದೊಳಗೆ ಬಗೆಹರಿಸಿ ಸಂಬಂಧಿತ ಅಧಿಕಾರಿಗಳು ಆಯೋಗಕ್ಕೆ ವರದಿ ಸಲ್ಲಿಸಬೇಕು. ಶಾಲಾ ಮತ್ತು ಕಾಲೇಜು ಆವರಣಗಳಲ್ಲಿ ಕುಡುಕರ ಕಾಟ ತಡೆಗಟ್ಟಲು ಪೊಲೀಸ್ ಗಸ್ತು ಹೆಚ್ಚಿಸಬೇಕು” ಎಂದು ಸೂಚಿಸಿದರು.
ಸಭೆಯಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ತಹಶೀಲ್ದಾರ್ ದತ್ತಾತ್ರೇಯ ಗಾದಾ, ಇಒ ರಮೇಶ್ ಸುಲ್ಫಿ, ಸಿಡಿಪಿಒ ಗೌತಮ ಶಿಂಧೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ದಿಲೀಪ ಉತ್ತಮ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರು, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಪ್ರಭಾಕರ ಕಳಮಾಸೆ, ಅಕ್ಷರ ದಾಸೋಹ ಯೋಜನಾಧಿಕಾರಿ ಸಂಜಯಕುಮಾರ ಕಾಂಗೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






