ಮಂಗಳವಾರ ಸಂಜೆ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಕೆಎಸ್ಆರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಡಿಸೈರ್ ಕಾರಿನ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.
ಇದನ್ನು ಓದಿ: ಶಿವಮೊಗ್ಗ: ತಾಯಿ–ಮಗ ಒಂದೇ ದಿನ ಆತ್ಮಹತ್ಯೆ, ‘ಆ’ ಬಂಗಲೆಯಲ್ಲಿ ಈಗಾಗಲೇ ನಾಲ್ಕನೇ ಸಾವು..!
ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದ ಮೂಲದ ಮುಸ್ಲಿಂ ಕುಟುಂಬವೊಂದು ಚೆನ್ನಗಿರಿಯಿಂದ ಶೃಂಗೇರಿಯತ್ತ ತಮ್ಮ ಕಾರಿನಲ್ಲಿ ಮರಳುತ್ತಿತ್ತು. ಈ ವೇಳೆ ಮಂಗಳೂರಿನಿಂದ ರಾಯಚೂರು ಕಡೆಗೆ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಭಾರತೀಪುರ ಕ್ರಾಸ್ ಬಳಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಷ್ಟರಲ್ಲಿ ಇನ್ನಿಬ್ಬರು ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಿ ಫಾತಿಮಾ (70), ರಿಹಾನ್ (15), ರಾಹಿಲ್ (9) ಮತ್ತು ಝಯಾನ್ (12) ಮೃತಪಟ್ಟಿದ್ದಾರೆ ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಶೃಂಗೇರಿ ತಾಲೂಕಿನ ಮೆಣಸೆ ಗ್ರಾಮದವರು. ಬಾಲಕರ ಅಕಾಲಿಕ ಮರಣ ಹಾಗೂ ಹಿರಿಯ ಸದಸ್ಯರ ಅಗಲಿಕೆ ಇಡೀ ಗ್ರಾಮವನ್ನು ಶೋಕದಲ್ಲಿ ಮುಳುಗಿಸಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಝರೀನಾ (35), ರಿಹ್ಹಾ (12) ಮತ್ತು ರಿಯಾಜ್ (35) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಸದ್ಯ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆ ಮುಂದುವರಿದಿದೆ. ಕೆಎಸ್ಆರ್ಟಿಸಿ ಬಸ್ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಬಸ್ನ ಮುಂಭಾಗಕ್ಕೂ ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ತೀರ್ಥಹಳ್ಳಿ ಶವಾಗಾರಕ್ಕೆ ಕಳುಹಿಸಲಾಗಿದೆ. ರಸ್ತೆ ತಿರುವಿನಲ್ಲಿ ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಈ ಕುರಿತು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಒಂದೇ ಕುಟುಂಬದ ನಾಲ್ವರನ್ನು ಕಳೆದುಕೊಂಡ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ರಸ್ತೆ ಸುರಕ್ಷತೆಯ ಬಗ್ಗೆ ಎಷ್ಟೇ ಜಾಗೃತಿ ಮೂಡಿಸಿದರೂ ಇಂತಹ ದುರ್ಘಟನೆಗಳು ಮರುಕಳಿಸುತ್ತಿರುವುದು ದುಃಖಕರವಾಗಿದೆ.







1 thought on “ತೀರ್ಥಹಳ್ಳಿ: ಬಸ್-ಕಾರು ಮುಖಾಮುಖಿ ಅಪಘಾತ, ಒಂದೇ ಕುಟುಂಬದ ನಾಲ್ವರು ಸಾವು..!!”