ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾದ ಮಾತ್ರೆ ಸೇವನೆಯ ನಂತರ ಏಕಾಏಕಿ 59 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ವರದಿಯಾಗಿದೆ. ಈ ಘಟನೆ ಶಾಲೆ ಹಾಗೂ ಗ್ರಾಮದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣಕ್ಕೆ ಕಾರಣವಾಯಿತು.
ಅನಿಮಿಯಾ (ರಕ್ತಹೀನತೆ) ತಡೆಗಟ್ಟುವ ಉದ್ದೇಶದಿಂದ ಆರೋಗ್ಯ ಇಲಾಖೆ ಶಾಲಾ ಮಕ್ಕಳಿಗೆ ವಾರಕ್ಕೆ ಒಮ್ಮೆ ಖನಿಜಾಂಶಯುಕ್ತ ಮಾತ್ರೆಗಳನ್ನು ನೀಡುತ್ತದೆ. ಅದೇ ಕ್ರಮದಂತೆ ಇಂದು ಮಧ್ಯಾಹ್ನ ಅರಳಿಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತ್ರೆ ವಿತರಿಸಲಾಗಿತ್ತು. ಶಾಲೆಯಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಮಾತ್ರೆ ಸೇವಿಸಿದ ಸ್ವಲ್ಪ ಸಮಯದಲ್ಲೇ ಸುಮಾರು 59 ಮಕ್ಕಳಿಗೆ ಹೊಟ್ಟೆನೋವು, ವಾಂತಿ ಭಾವನೆ ಹಾಗೂ ಅಸ್ವಸ್ಥತೆ ಕಾಣಿಸಿಕೊಂಡಿದೆ.
ಇದನ್ನು ಓದಿ: ಶಿವಮೊಗ್ಗ: ತಾಯಿ–ಮಗ ಒಂದೇ ದಿನ ಆತ್ಮಹತ್ಯೆ, ‘ಆ’ ಬಂಗಲೆಯಲ್ಲಿ ಈಗಾಗಲೇ ನಾಲ್ಕನೇ ಸಾವು..!
ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಕಂಡ ತಕ್ಷಣ ಶಿಕ್ಷಕರು ಶಾಲಾ ಆಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಅಸ್ವಸ್ಥ ಮಕ್ಕಳನ್ನು ತಕ್ಷಣ ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿದೆ. ವೈದ್ಯರು ಅಗತ್ಯ ಚಿಕಿತ್ಸೆ ನೀಡಿದ್ದು, ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸದ್ಯ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ತಾಲೂಕು ಆರೋಗ್ಯಾಧಿಕಾರಿ (ಟಿಹೆಚ್‌ಓ) ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ನಾಗೇಂದ್ರಪ್ಪ, ಘಟನೆ ಕುರಿತು ಭಯಪಡಬೇಕಾದ ಅವಶ್ಯಕತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ವಿದ್ಯಾರ್ಥಿಗೂ ಪ್ರಾಣಾಪಾಯ ಸಂಭವಿಸಿಲ್ಲ. ಹೆಚ್ಚಿನವರು ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದು, ಉಳಿದವರು ವೈದ್ಯಕೀಯ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಹೇಳಿದ್ದಾರೆ.
ಮಾತ್ರೆಗಳ ಗುಣಮಟ್ಟ, ಸಂಗ್ರಹಣೆ ಹಾಗೂ ವಿತರಣಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಘಟನೆಗೆ ಕಾರಣವಾದ ಅಂಶಗಳ ಪತ್ತೆಗೆ ಆರೋಗ್ಯ ಇಲಾಖೆ ತನಿಖೆ ಆರಂಭಿಸಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.
ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಪೋಷಕರು ಆಸ್ಪತ್ರೆಗೆ ಧಾವಿಸಿ ಮಕ್ಕಳ ಆರೋಗ್ಯ ಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆ ಕೆಲ ಸಮಯ ಆತಂಕದ ವಾತಾವರಣ ಕಂಡುಬಂದಿತು.






