ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮೂರೂರು ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಹೃದಯವಿದ್ರಾವಕ ಘಟನೆ ಜನಮನ ಕಲುಕಿದೆ. ಒಂದೇ ಕುಟುಂಬದ ನಾಲ್ವರು — ತಂದೆ ಹಾಗೂ ಮೂವರು ಮಕ್ಕಳು — ಕಾಲುವೆಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಬೀದರ್ ತಾಲೂಕಿನ ಸಂಗೊಳಗಿ ಗ್ರಾಮದವರಾದ ಶಿವಮೂರ್ತಿ ಅವರು ಹಲವು ವರ್ಷಗಳಿಂದ ಮೈಲೂರಿನಲ್ಲಿ ವಾಸವಾಗಿದ್ದು, ಟಿವಿ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ. ಸಹೋದರರ ಆಸ್ತಿ ವಿವಾದ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಧನ್ನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಷಯ ತಿಳಿದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಹಾಗೂ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.






